
ಕಾರವಾರ-ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ನಕಲಿ ವೈದ್ಯರ ನೇಮಕದ ಬಗ್ಗೆ ಗಂಭೀರ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಅವರು, ಇಂಥ ಅಕ್ರಮಗಳು ಪತ್ತೆಯಾದರೆ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಆರೋಗ್ಯ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಪಿಎಂಇ ನೋಂದಣಿ ಹಾಗೂ ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಖಾಸಗಿ ನರ್ಸಿಂಗ್ ಕೇಂದ್ರಗಳು ವೈದ್ಯರನ್ನು ನೇಮಕ ಮಾಡುವ ಮುನ್ನ ಅವರ ನೈಜ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲೇಬೇಕು ಎಂದು ಸ್ಪಷ್ಟಪಡಿಸಿದರು.ನಕಲಿ ವೈದ್ಯರಿಗೆ ಕೆಲಸ ಮಾಡಲು ಅವಕಾಶ ನೀಡಿರುವುದು ದೃಢಪಟ್ಟಲ್ಲಿ, ಸಂಬಂಧಿಸಿದ ಸಂಸ್ಥೆಗಳಿಗೆ ಮೊದಲ ಹಂತದಲ್ಲಿ ನಿಯಮಾನುಸಾರ ದಂಡ ವಿಧಿಸಬೇಕು. ಅದೇ ಅಕ್ರಮ ಮರುಕಳಿಸಿದರೆ ದಂಡದ ಜೊತೆಗೆ ಜೈಲುಶಿಕ್ಷೆಗೆ ಅವಕಾಶ ಕಲ್ಪಿಸುವಂತೆ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ನಕಲಿ ವೈದ್ಯರು ಒಂದು ಸ್ಥಳದಲ್ಲಿ ಪತ್ತೆಯಾದ ಬಳಿಕ ಹೆಸರು ಹಾಗೂ ವಿಳಾಸ ಬದಲಿಸಿಕೊಂಡು ಜಿಲ್ಲೆಯ ಬೇರೆ ಭಾಗಗಳಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಹೆಚ್ಚಿರುವುದರಿಂದ, ಈ ಕುರಿತು ಆರೋಗ್ಯ ಇಲಾಖೆ ವ್ಯಾಪಕ ತಪಾಸಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಯಾವುದೇ ರೀತಿಯ ನಕಲಿ ವೈದ್ಯಕೀಯ ಸೇವೆಗೆ ಅವಕಾಶ ಇರಬಾರದು ಎಂಬುದು ಆಡಳಿತದ ಸ್ಪಷ್ಟ ನಿಲುವು ಎಂದು ಅವರು ಹೇಳಿದರು.
ಇದಲ್ಲದೆ, ಪ್ರಸ್ತುತ ನೋಂದಣಿಯಲ್ಲಿರುವ ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನವೀಕರಣದ ಸಂದರ್ಭದಲ್ಲಿ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಹೊಸದಾಗಿ ಅನುಮತಿ ಕೋರುವ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳು ಎಲ್ಲಾ ನಿಯಮಗಳು ಮತ್ತು ಷರತ್ತುಗಳನ್ನು ಪೂರೈಸಿರುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಅನುಮತಿ ನೀಡಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ., ಜಿಲ್ಲಾ ಆಯುಷ್ ಅಧಿಕಾರಿ ಡಾ. ಪ್ರವೀಣ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರ್ಕರ್, ಐಎಂಎ ಅಧ್ಯಕ್ಷ ಡಾ. ಸುರೇಶ್ ಭಟ್, ಮಹಿಳಾ ಸಾಮಾಜಿಕ ಕಾರ್ಯಕರ್ತೆ ಯಶೋಧಾ ಹೆಗಡೆ ಸೇರಿದಂತೆ ವಿವಿಧ ತಾಲೂಕುಗಳ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

