
ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಲಂಚದ ವಿರುದ್ಧ ಲೋಕಾಯುಕ್ತರ ಕಾರ್ಯಾಚರಣೆ ಮುಂದುವರಿದಿದ್ದು, ಬ್ಯಾಟರಾಯನಪುರದಲ್ಲಿನ ಅಬಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿ.ಸಿ) ಒಬ್ಬರು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ.

ಮೈಕ್ರೋ ಬ್ರಿವೇರಿ ಹಾಗೂ ಸಿಎಲ್-7 ಲೈಸನ್ಸ್ ಮಂಜೂರಿಗಾಗಿ ಭಾರೀ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೈಸನ್ಸ್ ನೀಡುವ ನೆಪದಲ್ಲಿ ಒಟ್ಟು 75 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪವಿದ್ದು, ಅದರ ಮೊದಲ ಕಂತಾಗಿ 25 ಲಕ್ಷ ರೂಪಾಯಿ ಹಣ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆದಿದೆ.

ಈ ಕಾರ್ಯಾಚರಣೆ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ ಹಾಗೂ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ ಲಕ್ಕಪ್ಪ ಎಂಬವರನ್ನೂ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಅಬಕಾರಿ ಇಲಾಖೆಯಲ್ಲಿನ ಅಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.ಲಂಚದ ಆರೋಪದಡಿ ನಡೆದ ಈ ಬಂಧನದಿಂದ ಅಬಕಾರಿ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನದ ಅಗತ್ಯ ಮತ್ತೆ ಮುನ್ನೆಲೆಗೆ ಬಂದಿದೆ.

