
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆ ದೀರ್ಘಕಾಲದಿಂದ ಎದುರು ನೋಡುತ್ತಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯ ಕನಸು ಇದೀಗ ಸಾಕಾರಗೊಳ್ಳುವ ಹಂತಕ್ಕೆ ಬಂದಿದೆ. ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರವಾರದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ 100 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಮುಂದುವರೆಸುತ್ತಿದೆ. ಇತ್ತೀಚೆಗೆ ಕಾರವಾರದಲ್ಲಿ ಸುಮಾರು 198 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮುಂದಿನ ಬಜೆಟ್‌ನಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದಾಗಿ ಅವರು ಭರವಸೆ ನೀಡಿದ್ದರು.ಈಗ ಬಜೆಟ್‌ನಲ್ಲಿ ಕಾರವಾರದ ಜೊತೆಗೆ ಯಾದಗಿರಿ ಜಿಲ್ಲೆಗೆ ಸಹ ತಲಾ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಉನ್ನತ ಮಟ್ಟದ ವೈದ್ಯಕೀಯ ಸೇವೆಗಳ ಕೊರತೆಯಿಂದಾಗಿ ಗಂಭೀರ ರೋಗಿಗಳ ಚಿಕಿತ್ಸೆಗೆ ಜನರು ಸಾಮಾನ್ಯವಾಗಿ ಮಂಗಳೂರು ಅಥವಾ ನೆರೆಯ ಗೋವಾ ರಾಜ್ಯದ ಆಸ್ಪತ್ರೆಗಳನ್ನು ಅವಲಂಬಿಸುವ ಪರಿಸ್ಥಿತಿ ಇತ್ತು. ಇದರಿಂದ ರೋಗಿಗಳು ಹಾಗೂ ಅವರ ಕುಟುಂಬಗಳಿಗೆ ಸಮಯ ಮತ್ತು ಹಣದ ದೃಷ್ಟಿಯಿಂದ ಹೆಚ್ಚಿನ ತೊಂದರೆ ಉಂಟಾಗುತ್ತಿತ್ತು.

ಆದರೆ ಹೊಸದಾಗಿ ಘೋಷಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭಿಸಿದ ಬಳಿಕ ಉನ್ನತ ಮಟ್ಟದ ಚಿಕಿತ್ಸೆಗಳು ಮತ್ತು ಸಂಕೀರ್ಣ ಶಸ್ತ್ರಚಿಕಿತ್ಸೆಗಳು ಜಿಲ್ಲೆಯಲ್ಲೇ ಲಭ್ಯವಾಗುವ ಸಾಧ್ಯತೆ ಇದೆ. ಇದರಿಂದ ರೋಗಿಗಳು ದೂರದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಬಹುತೇಕ ಕಡಿಮೆಯಾಗಲಿದೆ.
ಸರ್ಕಾರದ ಈ ಘೋಷಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಜನರು ಸ್ವಾಗತಿಸಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಂದ ಸಂತೋಷ ವ್ಯಕ್ತವಾಗುತ್ತಿದೆ. ಆರೋಗ್ಯ ಸೇವೆಗಳ ಅಭಿವೃದ್ಧಿಯ ದೃಷ್ಟಿಯಿಂದ ಈ ಯೋಜನೆ ಜಿಲ್ಲೆಯ ಜನರಿಗೆ ಮಹತ್ವದ ನೆರವಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ.
