ಭಟ್ಕಳ,: ರಾಜ್ಯದ ಪ್ರಮುಖ ಪ್ರವಾಸಿ ತಾಣವಾದ ಮುರ್ಡೇಶ್ವರದ ಸುತ್ತಮುತ್ತಲಿನ ರಸ್ತೆ ವ್ಯವಸ್ಥೆ ಹದಗೆಟ್ಟಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಸ್ತಿಮಕ್ಕಿಯಿಂದ ಅರ್ಬನ್ ಬ್ಯಾಂಕ್‌ವರೆಗೆ ಇರುವ ನ್ಯಾಷನಲ್ ಕಾಲೋನಿಯ ರಸ್ತೆ ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದ್ದು, ಕಳೆದ ಐದು ತಿಂಗಳಿಂದ ‘ರಿಪೇರಿ’ ಹೆಸರಿನಲ್ಲಿ ಜಲ್ಲಿ ಹಾಕಿ ಬಿಟ್ಟು ಕಾಮಗಾರಿ ಪೂರ್ಣಗೊಳಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಜಲ್ಲಿ ತುಂಬಿದ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದ್ದು, ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಜಾರಿ ಬಿದ್ದು ಗಾಯಗೊಳ್ಳುತ್ತಿರುವ ಘಟನೆಗಳು ಹೆಚ್ಚಾಗಿವೆ. ಈ ಕುರಿತು ಹಲವು ಬಾರಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಗಮನಕ್ಕೆ ತಂದರೂ, ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದಕ್ಕೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ವೇಳೆ ಹಲವು ಅಭಿವೃದ್ಧಿ ಭರವಸೆಗಳನ್ನು ನೀಡಿದ್ದರೂ, ಈಗ ಸಚಿವರನ್ನು ಸಂಪರ್ಕಿಸುವುದೇ ಕಷ್ಟವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ತಕ್ಷಣ ರಸ್ತೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಕೈಗೊಳ್ಳುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿರುವ ಮುರ್ಡೇಶ್ವರದಂತಹ ಪ್ರದೇಶದಲ್ಲಿ ಮೂಲಸೌಕರ್ಯಗಳ ನಿರ್ಲಕ್ಷ್ಯವು ಸ್ಥಳೀಯರ ಬದುಕಿನ ಗುಣಮಟ್ಟಕ್ಕೂ, ಪ್ರವಾಸೋದ್ಯಮ ಕ್ಷೇತ್ರಕ್ಕೂ ಹಿನ್ನಡೆಯಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ.

