
ಭಟ್ಕಳ: ಮುರುಡೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸಾಗರನಾಥ್ (40) ಎಂದು ಗುರುತಿಸಲಾಗಿದೆ. ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು ಎಂದು ತಿಳಿದುಬಂದಿದೆ.

ಕೇರಳದಿಂದ ಮುರ್ಡೇಶ್ವರದತ್ತ ಬರುತ್ತಿದ್ದ ಕಾರು, ಮುರ್ಡೇಶ್ವರ ರೈಲು ನಿಲ್ದಾಣದ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಜ್ಜಲ್ಪಟ್ಟಿದ್ದು, ಸಾಗರನಾಥ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಇನ್ನು ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಮುರುಡೇಶ್ವರ ಪೊಲೀಸ್ ಠಾಣೆ ಪಿಎಸ್‌ಐ ಹನುಮಂತ ಭಿರಾದಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
