
ಭಟ್ಕಳ , ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ವೆಂಕಟಾಪುರ ನದಿಯ ಹಿನ್ನೀರು ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ಒಂದೇ ಕುಟುಂಬದ 8 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಜ್ಯದಾದ್ಯಂತ ದುಃಖ ಮೂಡಿಸಿದೆ. ತಟ್ಟೆಹಕ್ಕಲು ಕಡಲ ತೀರದ ಬಳಿ ಈ ದುರಂತ ಸಂಭವಿಸಿದೆ.
ಮೃತರು ಕಪ್ಪೆಚಿಪ್ಪು ತರಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದು, ಇನ್ನೂ ಕೆಲವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಈ ದುರ್ಘಟನೆಯ ಕುರಿತು Siddaramaiah ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಅದೇ ವೇಳೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಸಿಎಂ ತಮ್ಮ ಸಂದೇಶದಲ್ಲಿ, “ಇದು ಅತ್ಯಂತ ದುರದೃಷ್ಟಕರ ಹಾಗೂ ನೋವಿನ ಘಟನೆ. ಕಾಣೆಯಾದವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅವರು ಸುರಕ್ಷಿತವಾಗಿ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ,” ಎಂದು ತಿಳಿಸಿದ್ದಾರೆ.ಪ್ರಸ್ತುತ ಜಿಲ್ಲಾಡಳಿತ ಹಾಗೂ ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಿವೆ.

