ಭಟ್ಕಳ,: ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಉದ್ದೇಶದಿಂದ ಭಟ್ಕಳ ತಾಲೂಕಿನಾದ್ಯಂತ ಮದ್ಯ ಮಾರಾಟ ಮತ್ತು ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಎರಡು ಹಂತಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೊದಲ ಹಂತದಲ್ಲಿ, ಭಟ್ಕಳ ಶಹರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 25ರ ಬೆಳಿಗ್ಗೆ 6 ಗಂಟೆಯಿಂದ ಮೇ 27ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ಮದ್ಯದ ಅಂಗಡಿಗಳು, ಬಾರ್ ಹಾಗೂ ಮದ್ಯ ಮಾರಾಟ ಕೇಂದ್ರಗಳನ್ನು ಕಡ್ಡಾಯವಾಗಿ ಬಂದ್ ಮಾಡಲು ಸೂಚಿಸಲಾಗಿದೆ.
ಎರಡನೇ ಹಂತದಲ್ಲಿ, ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿ ವ್ಯಾಪ್ತಿಯಲ್ಲಿ ಮೇ 28ರ ಬೆಳಿಗ್ಗೆ 5 ಗಂಟೆಯಿಂದ ಮೇ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮದ್ಯ ಮಾರಾಟ, ದಾಸ್ತಾನು ಅಥವಾ ಸಾಗಾಟ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
