
ಭಟ್ಕಳ: ಇತಿಹಾಸ ಪ್ರಸಿದ್ಧ ಮುರಿನಕಟ್ಟೆ ಪ್ರದೇಶವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿ ಭಟ್ಕಳದಲ್ಲಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮುರಿನಕಟ್ಟೆಯನ್ನು ಅದೇ ಸ್ಥಳದಲ್ಲಿ ಮರುಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯದ ಪ್ರತಿಪಕ್ಷ ನಾಯಕ ಆರ್.ಅಶೋಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತಕ್ಷಣವೇ ಮುರಿನಕಟ್ಟೆ ಮರುಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಸಂಸದ ಕಾಗೇರಿ ಮಾತನಾಡಿ, “ಹಿಂದೂಗಳ ನಂಬಿಕೆ ಹಾಗೂ ಶ್ರದ್ಧಾಕೇಂದ್ರಗಳ ಮೇಲಿನ ದೌರ್ಜನ್ಯವನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ. ಮುರಿನಕಟ್ಟೆ ಮರುಸ್ಥಾಪನೆಯಾಗುವವರೆಗೆ ಹೋರಾಟ ನಿರಂತರವಾಗಿರಲಿದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ್, ಮಾಜಿ ಶಾಸಕಿ ರೂಪಾಲಿ ನಾಯ್ಕ್, ಮುಖಂಡರಾದ ಮಾಜಿ ಶಾಸಕ ಸುನಿಲ್ ನಾಯ್ಕ್ ಹಾಗೂ ಮಾಜಿ ಶಾಸಕ ಸುನಿಲ್ ಹೆಗಡೆ , ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ಎನ.ಹೆಗಡೆ, ಬಿಜಿಪಿ ಮುಖಂಡ ಗೋವಿಂದ ನಾಯ್ಕ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
