ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ,ಕರಾವಳಿ ಮೂಲದ ಬಿ.ಕೆ.ಹರಿಪ್ರಸಾದ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅಚ್ಚರಿಯ ರಾಜಕೀಯ ನಡೆ ಇಟ್ಟಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ, ಕೊನೆಯ ಕ್ಷಣದಲ್ಲಿ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಇದರಿಂದ ನಿರಾಸೆಯಾಗಿದೆ ಎನ್ನಲಾಗಿದೆ.
1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದ ಹರಿಪ್ರಸಾದ್ ಅವರು ಎಂಇಎಸ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದಶೆಯಲ್ಲೇ ಯುವ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶ ಮಾಡಿದ ಅವರು, ಪಕ್ಷದ ಸಂಘಟನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ.
1990ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ಹರಿಪ್ರಸಾದ್, ಒಟ್ಟು ನಾಲ್ಕು ಅವಧಿಗಳಲ್ಲಿ 21 ವರ್ಷಗಳ ಕಾಲ ಸಂಸದರಾಗಿದ್ದರು. ಈ ಅವಧಿಯಲ್ಲಿ ಹಲವು ಮಹತ್ವದ ಸಂಸದೀಯ ಸಮಿತಿಗಳಲ್ಲಿ ಕಾರ್ಯನಿರ್ವಹಿಸಿ ರಾಷ್ಟ್ರೀಯ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

2020ರಲ್ಲಿ ರಾಜ್ಯ ರಾಜಕೀಯಕ್ಕೆ ಮರಳಿದ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 2022ರ ಜನವರಿಯಿಂದ 2023ರ ಮೇ ತಿಂಗಳವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು.
ಹಿರಿಯ ನಾಯಕನಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ರಾಜಕೀಯ ಸವಾಲುಗಳಿಗೆ ಕಾಂಗ್ರೆಸ್ ಹೊಸ ತಂತ್ರ ರೂಪಿಸಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
