ಬೆಂಗಳೂರು, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಸಂಜೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಹಾಗೂ 13 ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಸಚಿವ ಎಂ.ಬಿ. ಪಾಟೀಲ್ ಅವರು ವಿಶ್ವಗುರು ಬಸವಣ್ಣ ಹಾಗೂ ಬಸವಾದಿ ಶರಣರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನ ಸೆಳೆಯಿತು.

ಪ್ರಮಾಣ ವಚನ ಸ್ವೀಕಾರದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಾದ್ಯಂತ 10 ಸಾವಿರ ಯುವ ಸಂಘಗಳನ್ನು ಆರಂಭಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದರು. ಪ್ರತಿ ಪಂಚಾಯತಿಯಲ್ಲಿ ಒಂದು ಯುವ ಸಂಘ ಸ್ಥಾಪಿಸಿ, ಪ್ರತಿಯೊಂದಕ್ಕೂ ಸರ್ಕಾರದಿಂದ ₹10 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಕ್ರೀಡೆ, ನಾಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಯುವಕರಲ್ಲಿ ನಾಯಕತ್ವ ಬೆಳೆಸುವ ಉದ್ದೇಶದಿಂದ ಈ ಸಂಘಗಳನ್ನು ರಚಿಸಲಾಗುವುದು ಎಂದು ಅವರು ಹೇಳಿದರು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಜನತೆಗೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ, ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವಜನರ ಸಹಭಾಗಿತ್ವದೊಂದಿಗೆ ರಾಜ್ಯವನ್ನು ಅಭಿವೃದ್ಧಿಯ ಉನ್ನತ ಶಿಖರಕ್ಕೆ ಕೊಂಡೊಯ್ಯುವ ಸಂಕಲ್ಪ ವ್ಯಕ್ತಪಡಿಸಿದರು. “ಎಲ್ಲರೂ ಕೈಜೋಡಿಸಿದರೆ ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕ ನಿರ್ಮಾಣ ಸಾಧ್ಯ” ಎಂದು ಅವರು ಹೇಳಿದರು
