ಭಟ್ಕಳ: ಮುರಿನಕಟ್ಟೆ ಧ್ವಂಸ ಪ್ರಕರಣವನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಭಟ್ಕಳದಲ್ಲಿ ಸ್ವಯಂಪ್ರೇರಿತ ಬಂದ್ ನಡೆಯಿತು. ಬಂದ್‌ಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದ್ದು, ಸಾವಿರಾರು ಜನರು ಭಾಗವಹಿಸಿದ ಬೃಹತ್ ಪ್ರತಿಭಟನೆ ನಗರದಲ್ಲಿ ನಡೆಯಿತು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಭಟ್ಕಳದಲ್ಲಿ 900ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಜೊತೆಗೆ 5 ಕೆಎಸ್‌ಆರ್‌ಪಿ ಮತ್ತು 2 ಡಿಆರ್ ತುಕಡಿಗಳನ್ನು ಭದ್ರತಾ ಕಾರ್ಯಕ್ಕೆ ಬಳಸಿಕೊಳ್ಳಲಾಯಿತು. ಉಡುಪಿ-ಭಟ್ಕಳ ಗಡಿ ಭಾಗದಲ್ಲಿ ವಿಶೇಷ ಚೆಕ್‌ಪೋಸ್ಟ್ ಸ್ಥಾಪಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66ರ ಮುರಿನಕಟ್ಟೆ ಪ್ರದೇಶ ಸೇರಿದಂತೆ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು.

ಪ್ರತಿಭಟನಾ ಮೆರವಣಿಗೆ ಚನ್ನಪಟ್ಟಣ ಹನುಮದೇವಾಲಯದಿಂದ ಆರಂಭಗೊಂಡು ಹೂವಿನಪೇಟೆ ಮಾರುಕಟ್ಟೆ, ಮಾರಿಕಾಂಬಾ ದೇವಸ್ಥಾನ, ಹಳೆ ಬಸ್ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಾಗಿಬಂದು ಭಟ್ಕಳ ಎಸಿ ಕಚೇರಿ ತಲುಪಿತು. ಬಳಿಕ ಅದು ಬೃಹತ್ ಪ್ರತಿಭಟನಾ ಸಭೆಯಾಗಿ ಮಾರ್ಪಟ್ಟಿತು.

ಸಭೆಯಲ್ಲಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ, ಮುರಿನಕಟ್ಟೆ ಧ್ವಂಸ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇಂತಹ ಘಟನೆಗಳು ಮರುಕಳಿಸಿದಲ್ಲಿ ರಾಜ್ಯವ್ಯಾಪಿ “ಭಟ್ಕಳ ಚಲೋ” ಹೋರಾಟಕ್ಕೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು.
ನಂತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ರವಾನಿಸಲಾಯಿತು. ಮುರಿನಕಟ್ಟೆ ದೈವಿಕ ಶಕ್ತಿ ಕೇಂದ್ರದ ಧ್ವಂಸ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು ಹಾಗೂ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಪ್ರತಿಭಟನೆಯಲ್ಲಿ 3 ಸಾವಿರಕ್ಕೂ ಅಧಿಕ ಹಿಂದೂ ಸಮಾಜದ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಬಂದ್ ಹಿನ್ನೆಲೆಯಲ್ಲಿ ಭಟ್ಕಳ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು.

