ಭಟ್ಕಳ, ಜೂನ್ 13: ಕಳೆದ 10 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದೇ ಸಂಕಷ್ಟ ಅನುಭವಿಸುತ್ತಿದ್ದ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ಕೋಟಿ ಖಜಾನೆ ಮನೆ ಭಾಗದ ಗ್ರಾಮಸ್ಥರು ಶನಿವಾರ ಮುಂಡಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ಲೈನ್ ಸುಮಾರು 10 ದಿನಗಳ ಹಿಂದೆ ಒಡೆದ ಪರಿಣಾಮ ನೀರಿನ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಸಮಸ್ಯೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೆಳಿಗ್ಗೆ ಪಂಚಾಯಿತಿ ಕಚೇರಿಗೆ ತೆರಳಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿ, ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ವೇಳೆ ಪಂಚಾಯಿತಿ ಪಿ.ಡಿ.ಓ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ತುರ್ತು ಪರಿಹಾರ ನೀಡುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮುಂಡಳ್ಳಿ ಗ್ರಾಮ ಪಂಚಾಯಿತಿಯ ನಿಕಟಪೂರ್ವ ಸದಸ್ಯ ರಾಜು ನಾಯ್ಕ್ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆ ಕುರಿತು ಚರ್ಚಿಸಿದರು.ಬಳಿಕ ತಾತ್ಕಾಲಿಕ ಕ್ರಮವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಲಾಯಿತು. ಆದರೆ ಗ್ರಾಮಸ್ಥರು ಇದರಿಂದ ಮಾತ್ರ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಹೇಳಿ, ಒಡೆದಿರುವ ಪೈಪ್ಲೈನ್‌ನ್ನು ಶೀಘ್ರ ದುರಸ್ತಿ ಮಾಡಿ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಆಗ್ರಹಿಸಿದರು.


