ಶಿರಸಿ: ಶಿರಸಿ ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕೋರಿ ಶಿರಸಿ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಶಿರಸಿ ಹಾಗೂ ಸುತ್ತಮುತ್ತಲಿನ ಭಾಗದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಲು ಆಸ್ಪತ್ರೆಯ ಅಭಿವೃದ್ಧಿ ಅತ್ಯಗತ್ಯವಾಗಿದ್ದು, ಜಿಲ್ಲಾ ಆಸ್ಪತ್ರೆ ಸ್ಥಾನಮಾನ ನೀಡುವುದರಿಂದ ಸುಧಾರಿತ ಚಿಕಿತ್ಸೆ ಸ್ಥಳೀಯ ಮಟ್ಟದಲ್ಲೇ ದೊರೆಯಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಮನವಿಯ ಪ್ರಮುಖ ಬೇಡಿಕೆಗಳಲ್ಲಿ ಆಸ್ಪತ್ರೆಯನ್ನು ಜಿಲ್ಲಾ ಮಟ್ಟಕ್ಕೆ ಮೇಲ್ದರ್ಜೆಗೇರಿಸುವುದು, ಆಧುನಿಕ ವೈದ್ಯಕೀಯ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ತುರ್ತಾಗಿ ಒದಗಿಸುವುದು ಹಾಗೂ ಆಸ್ಪತ್ರೆಯಲ್ಲಿ ಖಾಲಿ ಇರುವ ಮತ್ತು ಹೆಚ್ಚುವರಿಯಾಗಿ ಅಗತ್ಯವಿರುವ ವೈದ್ಯರು, ನರ್ಸ್‌ಗಳು ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ವಿಷಯವನ್ನು ಪರಿಶೀಲಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತ್ವಿಕ್ ಪಾಂಡೆ ಹಾಗೂ ಇಲಾಖೆಯ ಆಯುಕ್ತ ಗುರುದತ್ತ ಹೆಗಡೆ ಉಪಸ್ಥಿತರಿದ್ದರು.
