ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಇಸ್ಮಾಯಿಲ್ ಹವ್ವಾ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಎರಡು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಉಳಿದ ಐದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.
ಅಪರಾಧ ಹಿನ್ನೆಲೆಯನ್ನು ಪರಿಗಣಿಸಿ, ಭಟ್ಕಳ ನಗರ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದಾಗಿ ಪೊಲೀಸ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಗಡಿಪಾರು ಪ್ರಸ್ತಾವನೆಯನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಲ್ಲಿಸಿದ್ದರು.
ಪ್ರಸ್ತಾವನೆ ಕುರಿತು ವಿಚಾರಣೆ ನಡೆಸಿ, ಅಭಿಯೋಜನೆ ಮತ್ತು ಪ್ರತಿವಾದಿಗಳ ವಾದ ಆಲಿಸಿದ ಬಳಿಕ ಕರ್ನಾಟಕ ಪೊಲೀಸ್ ಕಾಯ್ದೆಯಡಿ 2026ರ ಜೂನ್ 17ರಿಂದ ಜಾರಿಗೆ ಬರುವಂತೆ ಆರು ತಿಂಗಳ ಅವಧಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.ಆದೇಶದ ಅನ್ವಯ ಭಟ್ಕಳ ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ಇಸ್ಮಾಯಿಲ್ ಹವ್ವಾನನ್ನು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.
