
ಭಟ್ಕಳ: ಗೋ ಹತ್ಯೆ ನಿಷೇಧ ಕಾಯ್ದೆಯಡಿ ದಾಖಲಾಗಿರುವ 8 ಪ್ರಕರಣಗಳು ಸೇರಿದಂತೆ ಒಟ್ಟು 9 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಭಟ್ಕಳದ ಇಬ್ರಾಯಿಂ ಮಹಮದ್ ಹುಸೇನ್ ಹವ್ವಾ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹನಿಪಾಬಾದ್ ಮುನರಪಳ್ಳಿ ನಿವಾಸಿಯಾಗಿರುವ ಇಬ್ರಾಯಿಂ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಎರಡು, ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಐದು ಹಾಗೂ ಮಂಕಿ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯಡಿ 8 ಪ್ರಕರಣಗಳು ಹಾಗೂ ಒಂದು ಹಲ್ಲೆ ಪ್ರಕರಣ ಸೇರಿವೆ.
ಆರೋಪಿಯು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ಸಾರ್ವಜನಿಕ ಶಾಂತಿ, ನೆಮ್ಮದಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಗಡಿಪಾರು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆ ಕುರಿತು ವಿಚಾರಣೆ ನಡೆಸಿ, ಉಭಯಪಕ್ಷಗಳ ವಾದ ಆಲಿಸಿದ ಬಳಿಕ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಗಡಿಪಾರು ಕ್ರಮ ಅಗತ್ಯವೆಂದು ನಿರ್ಧರಿಸಿ ಆದೇಶ ಹೊರಡಿಸಲಾಗಿದೆ.

ಆದೇಶದಂತೆ ಇಬ್ರಾಯಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಬಳಿಕ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯನ್ನು ಕೊಪ್ಪಳ ನಗರ ಠಾಣೆ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
