
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, 60ಕ್ಕೂ ಹೆಚ್ಚು ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇತ್ತೀಚಿನ ಬೆಳವಣಿಗೆಗಳು ಹಾಗೂ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಕೆಲವು ಪ್ರದೇಶಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಮುಂಬರುವ ಗಣೇಶೋತ್ಸವ, ಈದ್ ಮಿಲಾದ್ ಸೇರಿದಂತೆ ವಿವಿಧ ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಉದ್ದೇಶದಿಂದ ನೋಟಿಸ್ ನೀಡಲಾಗಿದೆ. ನೋಟಿಸ್ ಪಡೆದವರಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳೂ ಸೇರಿದ್ದಾರೆ ಎನ್ನಲಾಗಿದೆ.

ಪೊಲೀಸ್ ಇಲಾಖೆ ನೀಡಿದ ಮಾಹಿತಿ ಮತ್ತು ಸಂಬಂಧಿತ ವರದಿಗಳ ಆಧಾರದ ಮೇಲೆ ತಹಶೀಲ್ದಾರ್ ಕಚೇರಿ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚಿಸಲಾಗಿದೆ. ಜೊತೆಗೆ ಮುಚ್ಚಳಿಕೆ ಬಾಂಡ್ ಸಲ್ಲಿಸುವಂತೆ ತಿಳಿಸಲಾಗಿದೆ.
ನೋಟಿಸ್ ಜಾರಿ ಕ್ರಮದ ಕುರಿತು ಕೆಲವರಿಂದ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಂಬಂಧಿತರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಸಾರ್ವಜನಿಕರು ಶಾಂತಿ, ಸಹಕಾರ ಹಾಗೂ ಕಾನೂನು ಪಾಲನೆಗೆ ಮುಂದಾಗುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

