ಶಿರಸಿ: ಪ್ರಕೃತಿ ವಿಕೋಪದಿಂದ ಮನೆಗಳಿಗೆ ಹಾನಿಯಾದ ಸಂದರ್ಭದಲ್ಲಿ ತ್ವರಿತ ಪರಿಹಾರ ನೀಡುವ ವ್ಯವಸ್ಥೆ ಹಿಂದೆ ಉತ್ತಮವಾಗಿತ್ತು. ಆದರೆ ಪ್ರಸ್ತುತ ಆಡಳಿತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದ್ದಾರೆ.

ತಾಲೂಕಿನ ಹುತ್ತಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಟ್ಟನಮನೆ ಪ್ರದೇಶದಲ್ಲಿ ಶಿವಾನಂದ ಎಸ್. ಗೊಂಡೇನಹಳ್ಳಿ ಅವರ ಮನೆ ಸಮೀಪ ಧರೆ ಕುಸಿದು ಮನೆಯ ಕೋಣೆ ಹಾಗೂ ನೀರಿನ ಟ್ಯಾಂಕ್ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದ ಅವರು, ಸಂತ್ರಸ್ತ ಕುಟುಂಬಕ್ಕೆ ವೈಯಕ್ತಿಕವಾಗಿ ಆರ್ಥಿಕ ನೆರವು ವಿತರಿಸಿದರು.

ಈ ವೇಳೆ ಮಾತನಾಡಿದ ಅನಂತಮೂರ್ತಿ ಹೆಗಡೆ, “ಹಿಂದೆ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಪ್ರಕರಣಗಳಲ್ಲಿ 24ರಿಂದ 48 ಗಂಟೆಗಳೊಳಗೆ ಪರಿಹಾರ ಒದಗಿಸುವ ಪ್ರಯತ್ನ ನಡೆಯುತ್ತಿತ್ತು. ಆದರೆ ಈಗ ಘಟನೆ ನಡೆದು ನಾಲ್ಕು ದಿನಗಳಾದರೂ ಹಾನಿಯ ಅಂದಾಜು ವರದಿ ಸಲ್ಲಿಕೆಯಾಗಿಲ್ಲ ಎಂಬ ಉತ್ತರ ಅಧಿಕಾರಿಗಳಿಂದ ದೊರೆಯುತ್ತಿದೆ. ಇದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ,” ಎಂದು ಹೇಳಿದರು.
ಇನ್ನೂ ಮಳೆ ಮುಂದುವರಿದರೆ ಮತ್ತಷ್ಟು ಧರೆ ಕುಸಿಯುವ ಅಪಾಯ ಇರುವುದರಿಂದ ಸ್ಥಳೀಯರು ಆತಂಕದಲ್ಲಿದ್ದಾರೆ. ಅಲ್ಲದೆ, ವೈಜ್ಞಾನಿಕ ರೀತಿಯಲ್ಲಿ ತಡೆಗೋಡೆ ನಿರ್ಮಿಸದಿರುವುದೂ ಸಮಸ್ಯೆಗೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಂತ್ರಸ್ತ ಶಿವಾನಂದ ಅವರು ಔಷಧ ಅಂಗಡಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ತಕ್ಷಣದ ಪರಿಹಾರ ಅಗತ್ಯವಾಗಿದೆ. ಅಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿರುವುದರಿಂದ ವಿಳಂಬ ಮಾಡದೆ ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರವನ್ನು ಮಂಜೂರು ಮಾಡಬೇಕು ಎಂದು ಅವರು ಆಗ್ರಹಿಸಿದರು.
ನಂತರ ಹುತ್ತಗಾರು ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಗ್ರಾಮ ಆಡಳಿತಾಧಿಕಾರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಅನಂತಮೂರ್ತಿ ಹೆಗಡೆ, ಹಾನಿಯ ವರದಿಯನ್ನು ಶೀಘ್ರವಾಗಿ ಸಲ್ಲಿಸಿ ಸಂತ್ರಸ್ತರಿಗೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಆನಂದ್ ಸಾಲೇರ್, ನಗರ ಪ್ರಧಾನ ಕಾರ್ಯದರ್ಶಿ ನಾಗರಾಜ್ ನಾಯ್ಕ್, ಹುತ್ತಗಾರು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಫಕೀರಪ್ಪ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

