ಕಾರವಾರ: ಸರ್ಕಾರಿ ಸೇವೆಯಲ್ಲಿದ್ದರೂ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಂತೋಷ್ ಲಮಾಣಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಮಾಹಿತಿಯ ಪ್ರಕಾರ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಲಮಾಣಿ ಅವರು ಉತ್ತರ ಕನ್ನಡ ಜಿಲ್ಲೆಯ ಗೋವಾ ಗಡಿ ಭಾಗದ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸುವ ಅವಧಿಯಲ್ಲಿ ಗೋವಾದಿಂದ ಮದ್ಯವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುವ ಚಟುವಟಿಕೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಂಡ ಬಳಿಕವೂ ಗಡಿ ಭಾಗದ ಸಂಪರ್ಕ ಮುಂದುವರಿಸಿಕೊಂಡು ಅಕ್ರಮ ವ್ಯವಹಾರ ನಡೆಸುತ್ತಿದ್ದರೆಂಬ ಆರೋಪ ಕೇಳಿಬಂದಿದೆ.

2024ರ ಜೂನ್ ತಿಂಗಳಲ್ಲಿ ಗೋವಾದಿಂದ ಗೋಕರ್ಣದತ್ತ ಮದ್ಯ ಸಾಗಿಸುತ್ತಿದ್ದ ವೇಳೆ ಅವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದ ಬಳಿಕ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ ಮತ್ತೊಂದು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡರೂ ಅಕ್ರಮ ಚಟುವಟಿಕೆ ಮುಂದುವರಿದಿರುವ ಆರೋಪ ಎದುರಾಯಿತು.
ಇದಾದ ಬಳಿಕ ನ್ಯಾಯಾಲಯದ ಕೆಲಸದ ನಿಮಿತ್ತ ಕಾರವಾರಕ್ಕೆ ತೆರಳುತ್ತಿದ್ದೇನೆ ಎಂದು ತಿಳಿಸಿದ್ದ ಸಂದರ್ಭದಲ್ಲಿ ಮತ್ತೊಮ್ಮೆ ಗೋವಾ ಮದ್ಯ ಸಾಗಾಟ ಪ್ರಕರಣದಲ್ಲಿ ಅವರ ಹೆಸರು ಬೆಳಕಿಗೆ ಬಂದಿತ್ತು. ಅಲ್ಲದೆ, ಅಂಕೋಲಾ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ಮದ್ಯ ಸಾಗಣೆ ವಾಹನದ ತನಿಖೆಯಲ್ಲಿಯೂ ಸಂತೋಷ್ ಲಮಾಣಿ ಅವರ ಹೆಸರು ಉಲ್ಲೇಖಗೊಂಡಿರುವುದು ಪ್ರಕರಣಕ್ಕೆ ಮತ್ತಷ್ಟು ಬಲ ನೀಡಿತ್ತು.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾತೇನಹಳ್ಳಿ ಅವರ ನೇತೃತ್ವದಲ್ಲಿ ಇಲಾಖಾ ತನಿಖೆ ನಡೆಸಲಾಯಿತು. ತನಿಖಾ ವರದಿಯಲ್ಲಿ ಅವರ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಸಂತೋಷ್ ಲಮಾಣಿ ಅವರನ್ನು ಪೊಲೀಸ್ ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

