ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕಾರ್ಯ ಪ್ರಗತಿಯಲ್ಲಿದ್ದು, ಜಿಲ್ಲೆಯ ಎಲ್ಲ ಅರ್ಹ ಮತದಾರರಿಗೆ ಎನ್ಯುಮರೇಷನ್ ಫಾರ್ಮ್‌ಗಳ ವಿತರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿರುವ ಒಟ್ಟು 12,30,037 ಮತದಾರರಿಗೆ ಎನ್ಯುಮರೇಷನ್ ಫಾರ್ಮ್‌ಗಳನ್ನು ತಲುಪಿಸಲಾಗಿದೆ. ಇದುವರೆಗೆ 4,97,840 ಫಾರ್ಮ್‌ಗಳ ಮಾಹಿತಿಯನ್ನು ಗಣಕೀಕರಣಗೊಳಿಸಲಾಗಿದ್ದು, ಉಳಿದ ಅರ್ಜಿಗಳ ಡಿಜಿಟಲೀಕರಣ ಕಾರ್ಯವೂ ವೇಗವಾಗಿ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಮನೆ-ಮನೆಗೆ ತೆರಳಿ ನಡೆಸಿದ ಪರಿಶೀಲನೆಯ ವೇಳೆ ಮತದಾರರ ಪಟ್ಟಿಯನ್ನು ನವೀಕರಿಸುವ ಉದ್ದೇಶದಿಂದ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ನೋಂದಣಿಗೆ ಸಂಬಂಧಿಸಿದ ಪ್ರಕರಣಗಳನ್ನು ಗುರುತಿಸಲಾಗಿದೆ. ಒಟ್ಟು 6,365 ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 1,235 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು, 4,639 ಮಂದಿ ಮೃತಪಟ್ಟಿರುವುದು ಹಾಗೂ 452 ಮಂದಿ ದ್ವಿಪ್ರತಿ ಮತದಾರರಾಗಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಮತದಾರರ ಪಟ್ಟಿಯನ್ನು ಹೆಚ್ಚು ನಿಖರ, ಪಾರದರ್ಶಕ ಮತ್ತು ದೋಷರಹಿತವಾಗಿಸಲು ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ನಡೆಸುತ್ತಿದ್ದಾರೆ. ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಒದಗಿಸಿ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಮನವಿ ಮಾಡಿದ್ದಾರೆ.
