ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾನೂನುಬಾಹಿರವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರು ಹಾಗೂ ಅಕ್ರಮ ಕ್ಲಿನಿಕ್‌ಗಳ ವಿರುದ್ಧ ಜಿಲ್ಲಾಡಳಿತ ಕಠಿಣ ನಿಲುವು ತಾಳಿದೆ. ಇಂತಹ ಚಟುವಟಿಕೆಗಳ ಕುರಿತು ದೂರುಗಳು ಬಂದರೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ ಕಾನೂನು ಪ್ರಕಾರ ತಕ್ಷಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಕೆಪಿಎಂಇ ನೋಂದಣಿ ಹಾಗೂ ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ನಕಲಿ ವೈದ್ಯರ ವಿರುದ್ಧ ಸಲ್ಲಿಕೆಯಾಗುವ ಪ್ರತಿಯೊಂದು ದೂರನ್ನು ಸಮಗ್ರವಾಗಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ರಮ ವೈದ್ಯಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ. ಈ ತಂಡವು ನಕಲಿ ವೈದ್ಯರು ಮತ್ತು ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್‌ಗಳ ಮೇಲೆ ನಿಗಾ ವಹಿಸಿ, ಅಗತ್ಯವಿದ್ದಲ್ಲಿ ಗರಿಷ್ಠ ಪ್ರಮಾಣದ ದಂಡ ವಿಧಿಸುವುದು, ಕ್ಲಿನಿಕ್‌ಗಳನ್ನು ಮುಚ್ಚಿಸುವುದು ಹಾಗೂ ಕಾನೂನುಬದ್ಧವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತಹ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರಿಗೆ ಚಿಕಿತ್ಸೆ ನೀಡುವ ವೈದ್ಯರು ತಮ್ಮ ಮಾನ್ಯ ವೈದ್ಯಕೀಯ ಅರ್ಹತೆ ಹಾಗೂ ಅಧಿಕೃತ ಅನುಮತಿಯ ವ್ಯಾಪ್ತಿಯಲ್ಲಿಯೇ ಸೇವೆ ಸಲ್ಲಿಸಬೇಕು. ಅನುಮತಿಯಿಲ್ಲದೆ ಚಿಕಿತ್ಸೆ ನೀಡುವುದು ಅಥವಾ ಔಷಧ ವಿತರಣೆ ನಡೆಸುವುದು ಪತ್ತೆಯಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಇದೇ ವೇಳೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್‌ಗಳು, ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್‌ಗಳ ಮೇಲೆ ಆರೋಗ್ಯ ಇಲಾಖೆ ನಿಯಮಿತ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ನಕಲಿ ವೈದ್ಯಕೀಯ ಚಟುವಟಿಕೆಗಳ ಬಗ್ಗೆ ನಿರಂತರ ನಿಗಾ ವಹಿಸಿ, ಯಾವುದೇ ಉಲ್ಲಂಘನೆ ಕಂಡುಬಂದರೆ ತಕ್ಷಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಸಭೆಯಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, 2026ರ ಏಪ್ರಿಲ್‌ನಿಂದ ಇದುವರೆಗೆ ಕೆಪಿಎಂಇ ಕಾಯ್ದೆ ಉಲ್ಲಂಘಿಸಿದ ಏಳು ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅವರ ಕ್ಲಿನಿಕ್‌ಗಳನ್ನು ಮುಚ್ಚಿಸುವುದರ ಜೊತೆಗೆ ಒಟ್ಟು ₹1.45 ಲಕ್ಷ ದಂಡವನ್ನು ವಸೂಲು ಮಾಡಲಾಗಿದೆ.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಗದೀಶ ಯಾಜಿ, ಐಎಂಎ ಹಾಗೂ ವಿವಿಧ ವೈದ್ಯಕೀಯ ಸಂಘಗಳ ಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
