ಶಿರಸಿ: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಶಾಸಕ ಭೀಮಣ್ಣ ನಾಯ್ಕ ಅವರ ವಿರುದ್ಧ ತಾವು ಯಾವುದೇ ಅಸಂವಿಧಾನಿಕ ಅಥವಾ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಶಾಸಕ ಭೀಮಣ್ಣ ನಾಯ್ಕ ಅವರ ಬಗ್ಗೆ ತಮಗೆ ವೈಯಕ್ತಿಕ ಗೌರವವಿದ್ದು, ಜನಪ್ರತಿನಿಧಿಯಾಗಿ ಸಾರ್ವಜನಿಕ ಸಮಸ್ಯೆಗಳ ಕುರಿತು ಪ್ರಶ್ನೆ ಮಾಡಿರುವುದೇ ಹೊರತು ಯಾವುದೇ ವೈಯಕ್ತಿಕ ದ್ವೇಷದಿಂದ ಟೀಕೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ. ತಮ್ಮ ಹೋರಾಟ ವ್ಯಕ್ತಿಯ ವಿರುದ್ಧವಲ್ಲ, ವ್ಯವಸ್ಥೆಯಲ್ಲಿರುವ ಲೋಪಗಳ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಆರೋಪಗಳು ತಪ್ಪೆಂದು ಸಾಬೀತಾದರೆ ಸಾರ್ವಜನಿಕರ ಮುಂದೆ ಉತ್ತರಿಸಲು ತಾವು ಸಿದ್ಧ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಭೀಮಣ್ಣ ನಾಯ್ಕ ಅಭಿಮಾನಿ ಬಳಗ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾಡಲಾದ ಆರೋಪಗಳನ್ನು ಅನಂತಮೂರ್ತಿ ಹೆಗಡೆ ತಳ್ಳಿಹಾಕಿದ್ದಾರೆ. ವೈದ್ಯರು ಅಥವಾ ವೈದ್ಯಕೀಯ ವಲಯವನ್ನು ಅವಮಾನಿಸುವ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ತಮ್ಮ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿ ತಿರುಚಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಮತ್ತು ವಿರೋಧ ಪಕ್ಷಗಳಿಗೆ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಪ್ರಶ್ನಿಸುವ ಹಕ್ಕಿದೆ ಎಂದು ಅವರು ಹೇಳಿದ್ದಾರೆ. ಶಿರಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಧ್ವನಿ ಎತ್ತಿರುವುದು ಜನರ ಹಿತದೃಷ್ಟಿಯಿಂದಲೇ ಆಗಿದ್ದು, ಅದನ್ನು ವೈಯಕ್ತಿಕ ವಿಚಾರವಾಗಿ ಪರಿಗಣಿಸಬಾರದು ಎಂದಿದ್ದಾರೆ.
ತಮ್ಮ ಮುಂದಿನ ಹೋರಾಟಗಳಿಗೂ ತಡೆ ಒಡ್ಡುವ ರೀತಿಯ ಹೇಳಿಕೆಗಳು ಕೇಳಿಬಂದಿರುವುದನ್ನು ಉಲ್ಲೇಖಿಸಿದ ಅವರು, “ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮತ್ತು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ. ಆಸ್ಪತ್ರೆಯ ಕಾರ್ಯವೈಖರಿ ಹಾಗೂ ಜನಸೇವೆಯ ಕುರಿತು ಶಾಸಕರ ನೈತಿಕ ಹೊಣೆಗಾರಿಕೆಯನ್ನು ಪ್ರಶ್ನಿಸಿದ್ದೇ ಹೊರತು, ಯಾವುದೇ ವೈಯಕ್ತಿಕ ಅಥವಾ ಇತರೆ ತಾಕತ್ತಿನ ಬಗ್ಗೆ ಮಾತನಾಡಿಲ್ಲ” ಎಂದು ಹೇಳಿದ್ದಾರೆ.ಅಲ್ಲದೆ, ಪತ್ರಿಕಾಗೋಷ್ಠಿಯಲ್ಲಿ ತಮ್ಮ ಜಾತಿ, ಸಮಾಜ ಹಾಗೂ ಕುಟುಂಬದ ಹಿನ್ನೆಲೆಯನ್ನು ಪ್ರಸ್ತಾಪಿಸಿ ಮಾತನಾಡಿರುವುದು ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ವಿಚಾರಾಧಾರಿತ ಚರ್ಚೆ ನಡೆಸುವ ಬದಲು ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟಿರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಶಿರಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಮಾತನಾಡಿದ ಅನಂತಮೂರ್ತಿ ಹೆಗಡೆ, ಹಿಂದಿನ ಸರ್ಕಾರದ ಅವಧಿಯಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆಯನ್ನು ಸಂಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ಆಗ್ರಹಿಸಿದರು. 24 ಗಂಟೆಗಳ ತುರ್ತು ಚಿಕಿತ್ಸಾ ಸೇವೆ, ವೆಂಟಿಲೇಟರ್ ವ್ಯವಸ್ಥೆ, ಅಗತ್ಯ ಸಂಖ್ಯೆಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಅವರು ಒತ್ತಾಯಿಸಿದ್ದಾರೆ.
ಆಸ್ಪತ್ರೆಯಲ್ಲಿನ ಅವ್ಯವಸ್ಥೆಯಿಂದ ಮೃತಪಟ್ಟಿದ್ದಾರೆ ಎನ್ನಲಾದ ಮಿಥುನ್ ನಾಯ್ಕ ಅವರ ಕುಟುಂಬಕ್ಕೆ ಸಾಂತ್ವನ ಹೇಳುವುದು, ಅವರಿಗೆ ನೆರವು ನೀಡುವುದು ಹಾಗೂ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸುವುದು ತಪ್ಪಲ್ಲ ಎಂದು ಅವರು ಹೇಳಿದ್ದಾರೆ. ಬಡವರು ಮತ್ತು ಸಾರ್ವಜನಿಕರ ಪರವಾಗಿ ಧ್ವನಿ ಎತ್ತುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಪ್ರಶ್ನಿಸುವುದು ಜನಪ್ರತಿನಿಧಿಗಳಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಜವಾಬ್ದಾರಿಯೂ ಆಗಿದೆ ಎಂದು ಹೇಳಿರುವ ಅನಂತಮೂರ್ತಿ ಹೆಗಡೆ, ಆಸ್ಪತ್ರೆ ಸೇರಿದಂತೆ ಜನಸಾಮಾನ್ಯರ ಹಿತಾಸಕ್ತಿಯ ವಿಷಯಗಳಲ್ಲಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

