
ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ದಿಲೀಷ್ ಶಶಿ ಅವರು ಭಟ್ಕಳ ತಾಲೂಕಿನ ಪ್ರಮುಖ ಪ್ರವಾಸಿ ಕೇಂದ್ರವಾದ ಮುರುಡೇಶ್ವರ ಕಡಲ ತೀರಕ್ಕೆ ಭೇಟಿ ನೀಡಿ, ಅಲ್ಲಿನ ಸ್ವಚ್ಛತೆ, ಮೂಲಸೌಕರ್ಯ ಹಾಗೂ ಪ್ರವಾಸಿಗರಿಗೆ ಕಲ್ಪಿಸಲಾಗಿರುವ ವಿವಿಧ ಸೌಲಭ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಭೇಟಿಯ ವೇಳೆ ಕಡಲ ತೀರದ ನಿರ್ವಹಣೆ, ಪರಿಸರ ಸ್ವಚ್ಛತೆ ಮತ್ತು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪ್ರವಾಸಿಗರಿಗೆ ಇನ್ನಷ್ಟು ಉತ್ತಮ ಅನುಭವ ಕಲ್ಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಆದ್ಯತೆಯಿಂದ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದಾದ ಬಳಿಕ ಕುಮಟಾ ತಾಲೂಕಿನ ತಾಲೂಕು ಪಂಚಾಯತ್ ಕಚೇರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಮಾವಳ್ಳಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಡಾ. ದಿಲೀಷ್ ಶಶಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಕಚೇರಿ ಆಡಳಿತ, ಸ್ವಚ್ಛತೆ ಹಾಗೂ ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದರು.
ಅಭಿವೃದ್ಧಿ ಯೋಜನೆಗಳನ್ನು ಗುಣಮಟ್ಟ ಕಾಪಾಡಿಕೊಂಡು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಅಲ್ಲದೆ, ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಾದ ಸಮನ್ವಯ ಮತ್ತು ಜವಾಬ್ದಾರಿಯುತ ಕಾರ್ಯನಿರ್ವಹಣೆಗೆ ಒತ್ತು ನೀಡುವಂತೆ ಸಲಹೆ ನೀಡಿದರು.

ಪರಿಶೀಲನಾ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಸುನೀಲ್, ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
