ಕಾರ್ಕಳ: ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊಗಳು ಮತ್ತು ಸಾರ್ವಜನಿಕವಾಗಿ ಕೇಳಿಬಂದ ಆರೋಪಗಳ ಹಿನ್ನೆಲೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.ಲಭ್ಯವಿರುವ ಮಾಹಿತಿಯ ಪ್ರಕಾರ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್‌ಪಿ) ನಡೆಸಿದ ಪ್ರಾಥಮಿಕ ತನಿಖೆಯ ವರದಿಯನ್ನು ಪರಿಗಣಿಸಿ ಈ ಕ್ರಮ ಜರುಗಿಸಲಾಗಿದೆ.

ಅಮಾನತುಗೊಂಡವರಲ್ಲಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಶಿವಾನಂದ ಇದ್ದಾರೆ.ಇವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಅಮಾನತು ಆದೇಶ ಜಾರಿಗೊಳಿಸಲಾಗಿದ್ದು, ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಮುಂದುವರಿಯಲಿದೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ.
ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ಇನ್ನಷ್ಟು ತನಿಖೆ ನಡೆಯುತ್ತಿದ್ದು, ಅಂತಿಮ ತನಿಖಾ ವರದಿ ಸಲ್ಲಿಕೆಯಾದ ಬಳಿಕ ಮುಂದಿನ ಆಡಳಿತಾತ್ಮಕ ಅಥವಾ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

