ಕಾರವಾರ: ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಶಿರಸಿ–ಸಿದ್ದಾಪುರ ವಿಧಾನಸಭಾ ಕ್ಷೇತ್ರ ಹಾಗೂ ಉತ್ತರ ಕನ್ನಡ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಚಿವ ನಾಗೇಂದ್ರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ, 2024ರ ಮೇ 26ರಂದು ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಅವರು ಬರೆದಿದ್ದಾರೆ ಎನ್ನಲಾದ ಆರು ಪುಟಗಳ ಡೆತ್‌ನೋಟ್‌ನಲ್ಲಿ ಹಣದ ವರ್ಗಾವಣೆ ಮತ್ತು ವಿವಿಧ ಖಾತೆಗಳ ಕುರಿತು ಉಲ್ಲೇಖಗಳಿವೆ ಎಂದು ಆರೋಪಿಸಿದರು.

ಡೆತ್‌ನೋಟ್‌ನಲ್ಲಿ ಸಚಿವ ನಾಗೇಂದ್ರ ಅವರಿಂದ ಕೆಲವು ಖಾತೆಗಳಿಗೆ ಹಣ ವರ್ಗಾವಣೆ ಮಾಡುವಂತೆ ಮೌಖಿಕ ಸೂಚನೆ ನೀಡಲಾಗಿತ್ತು ಎಂಬ ಅಂಶವಿದೆ ಎಂದು ಹೆಗಡೆ ಹೇಳಿದರು. ಹಣ ಯಾವ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿಯೂ ದಾಖಲಾಗಿದ್ದು, ಈ ಕುರಿತು ತನಿಖೆ ನಡೆಸಿದರೆ ಹಣಕಾಸಿನ ವ್ಯವಹಾರಗಳ ಸಂಪೂರ್ಣ ವಿವರ ಹೊರಬರಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬಳ್ಳಾರಿ ಚುನಾವಣೆಗೆ ₹20 ಕೋಟಿ ವೆಚ್ಚ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಪರಿಶಿಷ್ಟ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ₹170 ಕೋಟಿ ಹಣದ ದುರ್ಬಳಕೆಯ ಆರೋಪಗಳ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಹೆಗಡೆ ಆಗ್ರಹಿಸಿದರು.
“ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು” ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರು ಎಸಳೆ, ಕೆ.ಜಿ. ನಾಯಕ್, ಶಿರಸಿ ನಗರ ಮಂಡಲ ಅಧ್ಯಕ್ಷ ಆನಂದ ಸಾಲೆರ್, ಶಿರಸಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ, ಸಿದ್ದಾಪುರ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ., ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಾಯ್ಸನ್ ಡಿಸೋಜಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯಕ್, ರಾಜು ಭಂಡಾರಿ, ರೈತ ಮೋರ್ಚಾ ಉಪಾಧ್ಯಕ್ಷ ಸುರೇಶ್ ನಾಯಕ್, ಬಸಣ್ಣ ಕುರುಬಕಟ್ಟಿ, ಯಲ್ಲಾಪುರ ರೈತ ಮೋರ್ಚಾ ಅಧ್ಯಕ್ಷ ರಾಮಣ್ಣ ಚಿಕ್ಯಾನಮನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಕಿಶನ್ ಕಾಂಬ್ಳೆ, ನಾಗೇಶ್ ಕುರ್ಡೇಕರ್ ಸೇರಿದಂತೆ ಶಿರಸಿ–ಸಿದ್ದಾಪುರ ಕ್ಷೇತ್ರದ ಹಾಗೂ ರೈತ ಮೋರ್ಚಾದ ವಿವಿಧ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

