
ಭಟ್ಕಳ: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಇಬ್ಬರಿಗೆ ಭಟ್ಕಳದ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜೀವನ್ ನಾಯ್ಕ ಹಾಗೂ ದೇವರಾಜ್ ನಾಯ್ಕ ಜಾಮೀನು ಪಡೆದಿರುವವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ಭಾಗವಾಗಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ವಕೀಲ ರವೀಂದ್ರ ಮಂಗಳ ಅವರು ಆರೋಪಿಗಳ ಪರವಾಗಿ ವಾದ ಮಂಡಿಸಿದರು. ವಿಚಾರಣೆ ಬಳಿಕ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಘಟನೆಗೆ ಸಂಬಂಧಿಸಿದ ಸಾಕ್ಷ್ಯಗಳು ಹಾಗೂ ಲಭ್ಯವಿರುವ ಮಾಹಿತಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಬಂಧನ ವಿರೋಧಿಸಿ ಪ್ರತಿಭಟನೆ
ಇಬ್ಬರ ಬಂಧನವನ್ನು ವಿರೋಧಿಸಿ ಹಾಗೂ ಅವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಹಿಂದೂ ಮುಖಂಡರು ಭಟ್ಕಳ ನಗರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು.ಘಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಬೆಳವಣಿಗೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭಟ್ಕಳದಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.
