ಮಂಗಳೂರು: ಚೀಟಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.

ಆರೋಪದ ಪ್ರಕಾರ, ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ₹25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊತ್ತದಲ್ಲಿ ಈಗಾಗಲೇ ₹15,000 ಹಣವನ್ನು ಮುಂಗಡವಾಗಿ ನೀಡಲಾಗಿತ್ತು ಎಂದು ತಿಳಿದುಬಂದಿದೆ.ಉಳಿದ ಮೊತ್ತದ ಭಾಗವಾಗಿ ₹5,000 ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಎಸ್ಪಿ ದಿನೇಶ್ ನೇತೃತ್ವದ ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದ್ದು, ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳು ಹಾಗೂ ಇತರ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ
