ಅಂಕೋಲಾ,-ಅಂಕೋಲಾ ತಾಲೂಕಿನ ಪೂಜಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರೊಬ್ಬರ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾಳೆ. ಈ ಘಟನೆ ಬೆಳಕಿಗೆ ಬಂದ ನಂತರ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಕ್ಕೆ ಒಳಗಾಗಿರುವವರು ರಾಮಚಂದ್ರ ಅಂಕೋಲೆಕರ್ ಎಂಬ ಉಪನ್ಯಾಸಕ ಎಂದು ತಿಳಿದುಬಂದಿದೆ. ಅವರು ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಆರೋಪ ವಿದ್ಯಾರ್ಥಿನಿಯರಿಂದ ಪೊಲೀಸರಿಗೆ ತಲುಪಿದೆ. ವಿಷಯ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪೋಷಕರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜು ಗೇಟ್ ಎದುರು ನೂರಾರು ಮಂದಿ ಪೋಷಕರು ಹಾಗೂ ವಿದ್ಯಾರ್ಥಿಗಳು ಜಮಾಯಿಸಿ ಘಟನೆಯ ವಿರುದ್ಧ ಕಿಡಿಕಾರಿದ್ದಾರೆ. “ಆಡಳಿತ ಮಂಡಳಿ ಘಟನೆಯನ್ನು ಲಘುವಾಗಿ ತೆಗೆದುಕೊಂಡಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿ, ಉಪನ್ಯಾಸಕರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಘಟನೆಯು ಕಾಲೇಜು ವಲಯದಲ್ಲಿ ಆತಂಕ ಹಾಗೂ ಚರ್ಚೆಗೆ ಕಾರಣವಾಗಿದೆ.

