ಕಾರವಾರ-ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿರುವುದು ರಾಜ್ಯದ ಹೆಮ್ಮೆಯ ವಿಚಾರವಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

“೨೦೦೦ ವರ್ಷಗಳ ಪಾರಂಪರ್ಯ ಹೊಂದಿರುವ ಕನ್ನಡ ಭಾಷೆ ಇಂದಿಗೂ ಜೀವಂತವಾಗಿ ಉಳಿದು ಬೆಳೆಯುತ್ತಿದೆ. ಜ್ಞಾನಪೀಠ ಪ್ರಶಸ್ತಿಗಳನ್ನು ಎಂಟು ಬಾರಿ ಗಳಿಸಿರುವ ಕನ್ನಡ ಭಾಷೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಣಲು ಎಲ್ಲರೂ ಸಹಕರಿಸಬೇಕು,” ಎಂದು ಅವರು ಹೇಳಿದರು.

ಸಚಿವರು ಜಿಲ್ಲೆಯ ಅಭಿವೃದ್ಧಿಯ ಕುರಿತೂ ಮಾತನಾಡಿದರು. ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ೪೫೦ ಹಾಸಿಗೆಗಳ ಹೊಸ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಸಾಧ್ಯವಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಜನತೆಗೆ ನೀಡಿದ ಐದು ಭರವಸೆ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿವೆ ಎಂದು ಸಚಿವರು ಹೇಳಿದರು.
“ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ೧೪ ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದು, ಗೃಹಲಕ್ಷ್ಮಿ ಯೋಜನೆಯಡಿ ೩.೩೬ ಲಕ್ಷ ಮಹಿಳೆಯರಿಗೆ ₹೩೦೦ ಕೋಟಿಗೂ ಹೆಚ್ಚು ಮೊತ್ತ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ೩.೯೫ ಲಕ್ಷ ಕುಟುಂಬಗಳು ಹಾಗೂ ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಡಿ ೨೫೦೦ ಕೋಟಿಗೂ ಅಧಿಕ ನೆರವು ಜಿಲ್ಲೆಗೆ ನೀಡಲಾಗಿದೆ,” ಎಂದು ವಿವರಿಸಿದರು.
ಶಿಕ್ಷಣ ಕ್ಷೇತ್ರಕ್ಕೂ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಶಿರಸಿ ಮತ್ತು ಭಟ್ಕಳದಲ್ಲಿ ಹಾಸ್ಟೇಲ್‌ಗಳು ನಿರ್ಮಾಣದಲ್ಲಿವೆ. ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹೫೫ ಕೋಟಿ ವೆಚ್ಚದ ವಸತಿಶಾಲೆ ಭಟ್ಕಳದಲ್ಲಿ ನಿರ್ಮಾಣಗೊಳ್ಳುತ್ತಿದೆ.
ಕರಾವಳಿಯ ಸಮಗ್ರ ಅಭಿವೃದ್ಧಿಗೆ ₹೨೩ ಸಾವಿರ ಕೋಟಿ ವೆಚ್ಚದ ೧೨೬ ಯೋಜನೆಗಳು ಕೈಗೆತ್ತಿಕೊಳ್ಳಲಾಗಿದ್ದು, ಪ್ರವಾಸೋದ್ಯಮ, ಮೀನುಗಾರಿಕೆ ಮತ್ತು ಬಂದರು ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ಕಾರ್ಯಕ್ರಮದ ಮುನ್ನ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಭುವನೇಶ್ವರಿ ದೇವಿಯ ಚಿತ್ರಕ್ಕೆ ಪೂಜೆ ಸಲ್ಲಿಸಿ ಸ್ತಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹಾಗೂ ತರಬೇತಿ ನಿರತ ಐಎಎಸ್ ಅಧಿಕಾರಿ ಝೂಪೀಶನ್ ಹಕ್ ಸೇರಿದಂತೆ ಅನೇಕರು ಭಾಗವಹಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಡೊಳ್ಳು, ಸೂಗ್ಗಿ ಕುಣಿತ, ಹಾಗೂ ವಿವಿಧ ಇಲಾಖೆಗಳ ಸಾಧನೆಯನ್ನು ತೋರಿಸಿದ ಸ್ತಬ್ಧಚಿತ್ರ ಮೆರವಣಿಗೆ ನಡೆಯಿತು.
ಕ್ರೀಡಾ ಸಾಧಕರಿಗೆ ಸನ್ಮಾನ ಮತ್ತು ಬುಡಕಟ್ಟು ಸಮುದಾಯದವರಿಗೆ ಪೌಷ್ಠಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮವೂ ನಡೆಯಿತು.

