ಬೆಂಗಳೂರು: ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC)ನ 43ನೇ ರಾಷ್ಟ್ರೀಯ ಸಮ್ಮೇಳನವು ನವೆಂಬರ್ 22ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ದೇಶದ ಹಿರಿಯ ಕಾರ್ಮಿಕ ಸಂಘಟನೆಗಳಲ್ಲಿ ಒಂದಾದ AITUC ಆಯೋಜಿಸಿರುವ ಈ ರಾಷ್ಟ್ರೀಯ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕ ಪ್ರತಿನಿಧಿಗಳು ಹಾಗೂ ವಿದೇಶಿ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

1920ರಲ್ಲಿ ಅಂದಿನ ಬಾಂಬೆ (ಇಂದಿನ ಮುಂಬೈ) ನಗರದಲ್ಲಿ ಸ್ಥಾಪನೆಯಾದ AITUC, ಭಾರತದ ಕಾರ್ಮಿಕ ಚಳವಳಿಯ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಬಾಲ ಗಂಗಾಧರ ತಿಲಕ್ ಮತ್ತು ಲಾಲಾ ಲಜಪತ್ ರಾಯ್ ಅವರಂತಹ ಸ್ವಾತಂತ್ರ್ಯ ಹೋರಾಟಗಾರರ ಕಾಲಘಟ್ಟದಲ್ಲಿ ಸಂಘಟಿತವಾದ ಈ ಸಂಸ್ಥೆ, ಕಾರ್ಮಿಕರ ಹಕ್ಕುಗಳು ಮತ್ತು ಹಿತರಕ್ಷಣೆಯ ಉದ್ದೇಶದಿಂದ ತನ್ನ ಚಟುವಟಿಕೆಗಳನ್ನು ಆರಂಭಿಸಿತು.1921ರಲ್ಲಿ ಅಹಮದಾಬಾದ್ನಲ್ಲಿ ನಡೆದ ಎರಡನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಸಂಪೂರ್ಣ ಸ್ವಾತಂತ್ರ್ಯದ ಬೇಡಿಕೆಯನ್ನು ಮೊದಲ ಬಾರಿಗೆ ಪ್ರತಿಪಾದಿಸಿದ ಸಂಘಟನೆ ಎಂಬ ಐತಿಹಾಸಿಕ ಹೆಗ್ಗಳಿಕೆಯೂ AITUCಗೆ ಇದೆ.
ದೇಶದ ಸ್ವಾತಂತ್ರ್ಯ ಚಳವಳಿ ಹಾಗೂ ಕಾರ್ಮಿಕ ಹೋರಾಟಗಳಲ್ಲಿ ಗುರುತಿಸಿಕೊಂಡ ಹಲವು ಪ್ರಮುಖ ನಾಯಕರು ವಿವಿಧ ಅವಧಿಗಳಲ್ಲಿ AITUC ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಶ್ರೀಪಾದ್ ಅಮೃತ ಡಾಂಗೆ, ವಿ.ವಿ. ಗಿರಿ, ಇಂದ್ರಜಿತ್ ಗುಪ್ತ, ಗುರುದಾಸ್ ದಾಸ್ ಗುಪ್ತ, ಎಂ.ಎಸ್. ಕೃಷ್ಣನ್ ಹಾಗೂ ಎ.ಬಿ. ಬರ್ಧನ್ ಸೇರಿದಂತೆ ಅನೇಕ ಗಣ್ಯರು ಸಂಘಟನೆಯ ನಾಯಕತ್ವ ವಹಿಸಿದ್ದರು.ಕರ್ನಾಟಕಕ್ಕೂ AITUC ರಾಷ್ಟ್ರೀಯ ಸಮ್ಮೇಳನದೊಂದಿಗೆ ಐತಿಹಾಸಿಕ ನಂಟಿದೆ. 1983ರಲ್ಲಿ ಬೆಂಗಳೂರಿನಲ್ಲಿ ನಡೆದ 32ನೇ ರಾಷ್ಟ್ರೀಯ ಸಮ್ಮೇಳನವನ್ನು ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಉದ್ಘಾಟಿಸಿದ್ದರು. ಇದೀಗ ಸುಮಾರು 43 ವರ್ಷಗಳ ಬಳಿಕ ಮತ್ತೊಮ್ಮೆ ರಾಜ್ಯದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿರುವುದು ವಿಶೇಷವಾಗಿದೆ.
ಈ ಬಾರಿಯ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು 1,200 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಅಲ್ಲದೆ, ವಿಶ್ವದ 15 ದೇಶಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ವಿವಿಧ ಕಾರ್ಯಕ್ರಮಗಳಲ್ಲಿ 50 ಸಾವಿರಕ್ಕೂ ಅಧಿಕ ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.
ಕಾರ್ಮಿಕರ ಹಕ್ಕುಗಳು, ಉದ್ಯೋಗ ಸಂಬಂಧಿತ ಸಮಸ್ಯೆಗಳು ಹಾಗೂ ದುಡಿಯುವ ವರ್ಗದ ಹಿತಾಸಕ್ತಿಗಳಿಗೆ ಸಂಬಂಧಿಸಿದ ವಿಚಾರಗಳ ಚರ್ಚೆಗೆ ಈ ರಾಷ್ಟ್ರೀಯ ಸಮ್ಮೇಳನ ವೇದಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಸಮ್ಮೇಳನವನ್ನು ಯಶಸ್ವಿಗೊಳಿಸಲು ರಾಜ್ಯದ ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳ ಕಾರ್ಮಿಕರು ಸಹಕರಿಸಬೇಕೆಂದು AITUC ಕಟ್ಟಡ ಕಾರ್ಮಿಕ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಿ.ಎನ್. ರೇವಣಕರ್ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
