ಸಿದ್ದಾಪುರ: ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ತಪಾಸಣಾ ಸೌಲಭ್ಯವನ್ನು ಅವರಿರುವ ಸ್ಥಳದಲ್ಲಿಯೇ ಒದಗಿಸುವ ಉದ್ದೇಶದಿಂದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಹಮ್ಮಿಕೊಳ್ಳುತ್ತಿರುವ ಉಚಿತ ಆರೋಗ್ಯ ಶಿಬಿರಗಳು ಜನಮೆಚ್ಚುಗೆಗೆ ಪಾತ್ರವಾಗಿವೆ ಎಂದು ಮಲ್ಲಿಕಾರ್ಜುನ ಸೇವಾ ಸಹಕಾರಿ ಸಂಘ ಬಾಳೇಸರದ ಅಧ್ಯಕ್ಷ ಸಿ.ಎನ್. ಹೆಗಡೆ ತಂಗಾರಮನೆ ಅಭಿಪ್ರಾಯಪಟ್ಟರು.

ತಾಲೂಕಿನ ಕರ್ಜಗಿ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್, ಚಂಡಿಕಾ ದೇವಿ ಗೆಳೆಯರ ಬಳಗ ಕರ್ಜಗಿ, ಟಿ.ಎಸ್.ಎಸ್. ಆಸ್ಪತ್ರೆ ಹಾಗೂ ಎಂ.ಎಂ. ಜೋಶಿ ಗಣೇಶ ನೇತ್ರಾಲಯ ಶಿರಸಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆರೋಗ್ಯವೇ ಮನುಷ್ಯನ ಬಹುದೊಡ್ಡ ಸಂಪತ್ತು. ಉತ್ತಮ ಆರೋಗ್ಯವಿದ್ದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ವಿಶೇಷ ಮಹತ್ವವಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ತಜ್ಞ ವೈದ್ಯರನ್ನೇ ಗ್ರಾಮಕ್ಕೆ ಕರೆಸಿ ಉಚಿತ ಕಣ್ಣಿನ ತಪಾಸಣೆ ನಡೆಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಇಂತಹ ಅವಕಾಶಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಅನಂತಮೂರ್ತಿ ಹೆಗಡೆಯವರು ಟ್ರಸ್ಟ್ ಮೂಲಕ ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿದ್ದಾಪುರದಲ್ಲಿ ಅನಂತ ಜನಸ್ಪಂದನ ಕೇಂದ್ರವನ್ನೂ ಸ್ಥಾಪಿಸಿದ್ದಾರೆ. ಅವರ ಜನಪರ ಕಾಳಜಿ ಇತರರಿಗೂ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಸುಬ್ರಾಯ ಕುಪ್ಪಾ ಗೌಡ ಕರ್ಜಗಿ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ತಪಾಸಣಾ ಶಿಬಿರಗಳು ಹೆಚ್ಚು ಪ್ರಯೋಜನಕಾರಿಯಾಗಿವೆ. ಇಂತಹ ಶಿಬಿರಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಗ್ರಾಮೀಣ ಭಾಗದ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ದೂರದ ಆಸ್ಪತ್ರೆಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಕೆಲವೊಮ್ಮೆ ಕಷ್ಟವಾಗುತ್ತದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ತಂಡವನ್ನೇ ಗ್ರಾಮಗಳಿಗೆ ಕರೆಸಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಧುಮೇಹ ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸುವುದು ಅಗತ್ಯ. ಈ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ಕೆ ಎಂ.ಎಂ. ಜೋಶಿ ಗಣೇಶ ನೇತ್ರಾಲಯ ಹಾಗೂ ಟಿ.ಎಸ್.ಎಸ್. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಉತ್ತಮ ಸಹಕಾರ ನೀಡುತ್ತಿದ್ದಾರೆ. ಟ್ರಸ್ಟ್‌ನ ವಿವಿಧ ಜನಪರ ಕಾರ್ಯಕ್ರಮಗಳಿಗೆ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದಲೂ ಪ್ರೋತ್ಸಾಹ ದೊರೆಯುತ್ತಿದೆ ಎಂದು ಹೇಳಿದರು.
ನೇತ್ರ ತಜ್ಞ ಡಾ. ನಿತೀನ್ ಹೆಗಡೆ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಲ್ಲಿ ಕಣ್ಣಿನ ಆರೋಗ್ಯದ ಕುರಿತು ಜಾಗೃತಿ ಹೆಚ್ಚಿಸುವ ಅಗತ್ಯವಿದೆ. ಅನೇಕರು ಕಣ್ಣಿನ ಸಮಸ್ಯೆಗಳಿದ್ದರೂ ತಪಾಸಣೆಗಾಗಿ ಆಸ್ಪತ್ರೆಗೆ ತೆರಳುವುದಿಲ್ಲ. ಇಂತಹ ಶಿಬಿರಗಳ ಮೂಲಕ ಸಮಸ್ಯೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದರು.ಶಿಬಿರದಲ್ಲಿ ತಪಾಸಣೆ ನಡೆಸಿದ ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ಆಸ್ಪತ್ರೆಯ ವತಿಯಿಂದ ವಿಶೇಷ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಮೂಲಕ ನಮ್ಮ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಸಾರ್ವಜನಿಕರು ಕಣ್ಣಿನ ಆರೋಗ್ಯದ ನಿರ್ಲಕ್ಷ್ಯ ಮಾಡದೆ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಬ್ಲೇಶ್ವರ ಗೌಡ ಕರ್ಜಗಿ ಮಾತನಾಡಿ, ಶಾಲೆಯ ಶತಮಾನೋತ್ಸವದ ಬಳಿಕ ಇಲ್ಲಿ ಇಂತಹ ಮತ್ತೊಂದು ಕಾರ್ಯಕ್ರಮ ಆಯೋಜನೆಯಾಗಿರುವುದು ಸಂತಸದ ಸಂಗತಿಯಾಗಿದೆ. ಅನಂತಮೂರ್ತಿ ಹೆಗಡೆಯವರ ಸಮಾಜಮುಖಿ ಕಾರ್ಯಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತಾರಗೊಳ್ಳಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಟಿ.ಎಸ್.ಎಸ್. ಆಸ್ಪತ್ರೆಯ ಮಾರ್ಕೆಟಿಂಗ್ ಮುಖ್ಯಸ್ಥ ಜಗದೀಶ ನಾಯ್ಕ, ಸಂತೋಷ ನಾಯ್ಕ ಸೇರಿದಂತೆ ಸ್ಥಳೀಯ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ಹಸ್ರಗೋಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರದೀಪ ಹೆಗಡೆ ಕರ್ಜಗಿ ಕಾರ್ಯಕ್ರಮ ನಿರ್ವಹಿಸಿದರು.
200ಕ್ಕೂ ಅಧಿಕ ಮಂದಿಗೆ ತಪಾಸಣೆ
ಕರ್ಜಗಿಯಲ್ಲಿ ನಡೆದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರದಲ್ಲಿ 200ಕ್ಕೂ ಅಧಿಕ ಜನರು ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಗ್ರಾಮೀಣ ಪ್ರದೇಶದಲ್ಲಿಯೇ ಇಂತಹ ವೈದ್ಯಕೀಯ ಸೇವೆ ಲಭ್ಯವಾಗುತ್ತಿರುವುದಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.
