
ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಕಾಮಗಾರಿ ಬಹುತೇಕ ಪೂರ್ಣಗೊಂಡು ಸಾಕಷ್ಟು ಸಮಯ ಕಳೆದಿದ್ದರೂ, ಆಸ್ಪತ್ರೆ ಕಾರ್ಯಾರಂಭಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳ ಖರೀದಿ ಹಾಗೂ ತಜ್ಞ ವೈದ್ಯರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಇನ್ನೂ ಆರಂಭವಾಗದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಡಿಸೆಂಬರ್ 16ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ.

ಶನಿವಾರ ಶಿರಸಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪಘಾತಗಳು ಹಾಗೂ ತುರ್ತು ಚಿಕಿತ್ಸೆಯ ಅವಶ್ಯಕತೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯತೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲೇ ಸಮರ್ಪಕ ಸೌಲಭ್ಯಗಳಿಲ್ಲದ ಕಾರಣ ರೋಗಿಗಳನ್ನು ಹೊರ ಜಿಲ್ಲೆಗಳ ಆಸ್ಪತ್ರೆಗೆ ಕರೆದೊಯ್ಯಬೇಕಾದ ಸ್ಥಿತಿ ಮುಂದುವರಿದಿದೆ ಎಂದರು.

ಈ ಅಗತ್ಯತೆಯನ್ನು ಮನಗಂಡು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 250 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದ್ದರೂ ಆಸ್ಪತ್ರೆ ಕಾರ್ಯಾರಂಭಕ್ಕೆ ಬೇಕಾದ ವ್ಯವಸ್ಥೆಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ವಿಷಯದಲ್ಲಿ ರಾಜಕೀಯ ಬೇಧ ಮರೆತು ಕ್ಷೇತ್ರದ ಜನರ ಹಿತದೃಷ್ಟಿಯಿಂದ ಎಲ್ಲರೂ ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಮನವಿ ಮಾಡಿದರು.

