
ಚಿತ್ರದುರ್ಗ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಖಾಸಗಿ ಸ್ಲೀಪರ್ ಬಸ್ ಒಂದು ಲಾರಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 17 ಜನರು ಸಜೀವ ದಹನವಾಗಿರುವ ದುರ್ಘಟನೆ ಗುರುವಾರ ಮುಂಜಾನೆ ನಡೆದಿದೆ.ಬೆಂಗಳೂರಿನಿಂದ ಗೋಕರ್ಣದತ್ತ ತೆರಳುತ್ತಿದ್ದ ಸೀಬರ್ಡ್ ಕಂಪನಿಗೆ ಸೇರಿದ ಸ್ಲೀಪರ್ ಕೋಚ್ ಬಸ್, ರಾಷ್ಟ್ರೀಯ ಹೆದ್ದಾರಿ–48ರ ಚಿತ್ರದುರ್ಗ ಸಮೀಪ ಭೀಕರ ಅಪಘಾತಕ್ಕೆ ಒಳಗಾಗಿದೆ. ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಈ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಎದುರಿನಿಂದ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬಸ್‌ನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಬಸ್‌ನ ಚಾಲಕ ಮತ್ತು ನಿರ್ವಾಹಕರು ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿ ಚಾಲಕ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರು ಇದ್ದು, ಅವರಲ್ಲಿ 14 ಮಹಿಳೆಯರು ಹಾಗೂ 15 ಪುರುಷರು ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವ 21 ಮಂದಿಯನ್ನು ಹಿರಿಯೂರು ಹಾಗೂ ತುಮಕೂರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.


