ದುರ್ಗಾಪರಮೇಶ್ವರಿ ಪ್ರೌಢಶಾಲೆ ಮತ್ತು ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ದೇಶಭಕ್ತಿ ಗೀತೆ ಹಾಗೂ ಭಾಷಣ ಸ್ಪರ್ಧೆ ಯಶಸ್ವಿ.
ಭಟ್ಕಳ-ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಅಳ್ವೆಕೋಡಿ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ ಜರಗಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾರಾಯಣ ದೈಮನೆ ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳು ದೇಶಕ್ಕಾಗಿ ದುಡಿದ ಮಹನೀಯರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ ಮಾತನಾಡಿ ಸ್ವತಂತ್ರ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸದಾ ಸ್ಮರಿಸಬೇಕು ಎಂದು ನುಡಿದರು. ನಂತರ ದುರ್ಗಾಪರಮೇಶ್ವರಿ ಪ್ರೌಢಶಾಲೆಯಿಂದ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ವಿದ್ಯಾರ್ಥಿಗಳು ರಾಷ್ಟ್ರಾಭಿಮಾನದ ಘೋಷಣೆಗಳನ್ನು ಕೂಗುತ್ತಾ ಶೋಭಾಯಾತ್ರೆ ನಡೆಸಿ ಊರಿನಲ್ಲಿಡೆ ಸ್ವಾತಂತ್ರೋತ್ಸವದ ಸಂಭ್ರಮ ಅನುರಣಿಸುವಂತೆ ಮಾಡಿದರು.
ನಂತರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿಗೀತೆ ಗಾಯನ ಸ್ಪರ್ಧೆ ನಡೆಯಿತು.ಭಾಷಣ ಸ್ಪರ್ಧೆಯಲ್ಲಿ ಪುಷ್ಪಾ ದಿನಕರ ನಾಯ್ಕ, ಸರಸ್ವತಿ ಮಾದೇವ ನಾಯ್ಕ ಹಾಗೂ ಕೌಶಿಕ ದತ್ತ ದೇವಾಡಿಗ ಅನುಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದುಕೊಂಡರೆ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕಾವ್ಯ ತಿಮ್ಮಪ್ಪ ದೇವಡಿಗ, ಬಿಂದು ಕೃಷ್ಣ ದೇವಡಿಗ, ಮೋನಿಷಾ ಮಂಜುನಾಥ ಮೊಗೇರ್ ಅನುಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ಮಾನಾಸುತ ಶಂಭು ಹೆಗಡೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಹುಮಾನ ವಿತರಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದರಲ್ಲದೇ ಶಾಲೆಯು ಎಸ್.ಎಸ್.ಎಲ್.ಸಿ. ಯಲ್ಲಿ ಪ್ರತಿಶತ ನೂರು ಫಲಿತಾಂಶವನ್ನು ಪಡೆದಿರುವುದನ್ನು ಶ್ಲಾಘಿಸಿದರು. ಮುಖ್ಯಾಧ್ಯಾಪಕ ಕೆ.ಬಿ.ಮಡಿವಾಳ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿದರು. ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಹನುಮಂತ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸ್ಪರ್ಧಾಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಸಮೂಹ ದೇಶ ಭಕ್ತಿಗೀತೆ ಹಾಗೂ ಸಮೂಹ ನೃತ್ಯವನ್ನು ಪ್ರಸ್ತುತಪಡಿಸಿದರು. ಬಹುಮಾನ ವಿಜೇತರಿಗೆ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಾಹಿತ್ಯ ಪರಿಷತ್ತಿನಿಂದ ಪ್ರಶಂಸನಾ ಪತ್ರ ಹಾಗೂ ಪುಸ್ತಕ ಬಹುಮಾನವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಭಾಸ್ಕರ್ ದೈಮನೆ, ಸಹ ಕಾರ್ಯದರ್ಶಿ ಭಾಸ್ಕರ್ ವೆಂಕಟರಮಣ ಮೊಗೇರ್, ಸದಸ್ಯ ಚಂದ್ರಕಾಂತ ಮೊಗೇರ, ಪ್ರಥಮ ದರ್ಜೆ ಗುತ್ತಿಗೆದಾರ ಬಾಬು ಸಣಕೂಸ ಅಳಕೂಸನಮನೆ ಮುಂತಾದ ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಶಿಕ್ಷಕ ಅಶೋಕ ಟಿ.ನಾಯ್ಕ ನಿರೂಪಿಸಿದರೆ ಶಿಕ್ಷಕ ವಿ.ಟಿ. ಗುಬ್ಬಿಹಿತ್ತಲ ವಂದಿಸಿದರು.ಕಾರ್ಯಕ್ರಮ ಸಂಘಟಿಸಲು ಸಹಕರಿಸಿದ ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅಭಿನಂದಿಸಿದ್ದಾರೆ.